Sunday, August 16, 2026
Homeನಿಮ್ಮ ಜಿಲ್ಲೆಉಡುಪಿ ಕಾಂಗ್ರೆಸ್ ಮುಖಂಡ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಉತ್ತರ ಕನ್ನಡದಲ್ಲಿ ಬಂಧನ

ಉಡುಪಿ ಕಾಂಗ್ರೆಸ್ ಮುಖಂಡ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಉತ್ತರ ಕನ್ನಡದಲ್ಲಿ ಬಂಧನ

ಕುಮಟಾ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಮುದರಂಗಡಿಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.

ಕುಮಟಾ ತಾಲೂಕಿನ ಹೊಳೆಗದ್ದೆ ಟೋಲ್ ನಾಕಾ ಹಾಗೂ ಭಟ್ಕಳದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಅಜಯ್ ರಸ್ತೋಗಿ ಅಲಿಯಾಸ್ ಅನ್ಮೋಲ್ (23) ಮತ್ತು ಜಿಯಾಹುಲ್ ವಜೂಲ್ ಶೇಖ್ ಅಲಿಯಾಸ್ ದೀಪಕ್ (38) ಅವರನ್ನು ವಶಕ್ಕೆ ಪಡೆದಿದ್ದಾರೆ. ಅಜಯ್ ರಸ್ತೋಗಿ ಉತ್ತರಾಖಂಡ ಮೂಲದವನಾಗಿದ್ದು, ದೀಪಕ್ ಬಿಹಾರ ಮೂಲದವನು ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್‌ನಲ್ಲಿ ಭಟ್ಕಳದತ್ತ ಪರಾರಿ

ಡೇವಿಡ್ ಡಿಸೋಜಾ ಅವರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಗಳು ಬಸ್‌ನಲ್ಲಿ ಭಟ್ಕಳದ ಕಡೆಗೆ ತೆರಳುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಬೈಂದೂರಿನ ಒತ್ತಿನಾಣೆ ಬಳಿ ಪೊಲೀಸರು ಬಸ್‌ನ್ನು ತಡೆದು ತಪಾಸಣೆ ನಡೆಸಿದ್ದರು.

ಈ ವೇಳೆ ಬಸ್‌ನಲ್ಲಿದ್ದ ಮೂವರು ಆರೋಪಿಗಳು ಪೊಲೀಸರನ್ನು ಕಂಡು ಇಳಿದು ಪರಾರಿಯಾಗಲು ಯತ್ನಿಸಿದ್ದಾರೆ. ಪೊಲೀಸರು ಬೆನ್ನಟ್ಟಿದಾಗ ಪ್ರಮುಖ ಆರೋಪಿ ರಾಜು (42) ಎಂಬಾತ ಕಾಪು ಪೊಲೀಸ್ ಠಾಣೆಯ ಪಿಎಸ್‌ಐ ತೇಜಸ್ವಿ ಅವರನ್ನು ದೂಡಿ ಹಾಕಿ, ತನ್ನ ಬಳಿಯಿದ್ದ ಪಿಸ್ತೂಲ್‌ನಿಂದ ಪೊಲೀಸರತ್ತ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಆತ್ಮರಕ್ಷಣೆಗಾಗಿ ಪೊಲೀಸರು ರಾಜುವಿನ ಕಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಆತನ ಬಳಿಯಿದ್ದ ಪಿಸ್ತೂಲ್‌ನ್ನೂ ವಶಪಡಿಸಿಕೊಳ್ಳಲಾಗಿದೆ. ಘಟನೆಯಲ್ಲಿ ಪಿಎಸ್‌ಐ ತೇಜಸ್ವಿ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರಾಜು ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಉತ್ತರ ಕನ್ನಡದಲ್ಲಿ ಇಬ್ಬರ ಬಂಧನ

ಕೃತ್ಯದ ಬಳಿಕ ಪರಾರಿಯಾಗಿದ್ದ ಅಜಯ್ ರಸ್ತೋಗಿ ಅಲಿಯಾಸ್ ಅನ್ಮೋಲ್ನನ್ನು ಕುಮಟಾದ ಹೊಳೆಗದ್ದೆ ಟೋಲ್ ನಾಕಾ ಬಳಿ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಜಿಯಾಹುಲ್ ವಜೂಲ್ ಶೇಖ್ ಅಲಿಯಾಸ್ ದೀಪಕ್ನನ್ನು ಭಟ್ಕಳದಲ್ಲಿ ವಶಕ್ಕೆ ಪಡೆಯಲಾಗಿದೆ.

ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಪುರಾವೆಗಳ ಆಧಾರದ ಮೇಲೆ ಆರೋಪಿಗಳ ಚಲನವಲನವನ್ನು ಪತ್ತೆಹಚ್ಚಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಉತ್ತರ ಪ್ರದೇಶ ಮೂಲದ ಶೂಟರ್ ರಾಜುವನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಇದೀಗ ಮತ್ತಿಬ್ಬರು ಆರೋಪಿಗಳ ಬಂಧನದೊಂದಿಗೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ಕುಮಟಾ ಹಾಗೂ ಭಟ್ಕಳ ಪೊಲೀಸರ ಸಹಕಾರದೊಂದಿಗೆ ನಡೆದ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments