Thursday, October 15, 2026
Homeನಿಮ್ಮ ಜಿಲ್ಲೆಮೇಲ್ಮನೆ ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಖಚಿತ: ಬಿ.ವೈ. ವಿಜಯೇಂದ್ರ ವಿಶ್ವಾಸ

ಮೇಲ್ಮನೆ ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಖಚಿತ: ಬಿ.ವೈ. ವಿಜಯೇಂದ್ರ ವಿಶ್ವಾಸ

ಬೆಂಗಳೂರು, ಅಕ್ಟೋಬರ್ 5: ರಾಜ್ಯ ವಿಧಾನಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಜೆಪಿ–ಜೆಡಿಎಸ್ ಮೈತ್ರಿ ಕಾರ್ಯಕರ್ತರು ಗೆಲುವಿನ ಸಂಕಲ್ಪದೊಂದಿಗೆ ಚುನಾವಣಾ ಕಣದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಆಗ್ನೇಯ ಪದವೀಧರರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು ಸೋಮವಾರ ಲಾಲ್‌ಬಾಗ್ ಸಮೀಪದಿಂದ ಪಾದಯಾತ್ರೆ ಮೂಲಕ ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಅಭ್ಯರ್ಥಿಗಳಿಗೆ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದ್ದು, ಚುನಾವಣಾ ವಾತಾವರಣ ಎನ್‌ಡಿಎ ಪರವಾಗಿದೆ ಎಂದು ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ದೃಢ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ. ವಿಧಾನಪರಿಷತ್ತಿನ ಗೌರವ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವಂತಹ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಮತದಾರರ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.

ಇನ್ನಿಬ್ಬರು ಎನ್‌ಡಿಎ ಅಭ್ಯರ್ಥಿಗಳಾದ ನಮೋಶಿ ಮತ್ತು ಸಂಕನೂರು ಅವರು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದು, ನಾಲ್ಕೂ ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳೇ ವಿಜಯಶಾಲಿಯಾಗಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ವಿಜಯೇಂದ್ರ ಹೇಳಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಎರಡೂ ಪಕ್ಷಗಳ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments