ಗುರುಮಠಕಲ್: ಈಶಾನ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರ ಗೆಲುವು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಗೆಲುವಾಗಿದೆ ಎಂದು ಮಾಜಿ ಸಚಿವರು ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಹೇಳಿದರು.
ಗುರುಮಠಕಲ್ ಪಟ್ಟಣದ ಕೃಷ್ಣಾ ಚಪೇಟ್ಲಾ ಅವರ ಕಟ್ಟಡದಲ್ಲಿ ನಡೆದ ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಪರ ಮತಯಾಚನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಗುರುಮಠಕಲ್ ಮತಕ್ಷೇತ್ರವು ಡಾ. ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರವಾಗಿದ್ದು, ಇದು ಕಾಂಗ್ರೆಸ್ ಪಕ್ಷದ ಭದ್ರ ಬುನಾದಿಯಾಗಿದೆ. ಇಲ್ಲಿ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರ ಗೆಲುವು ನೂರಕ್ಕೆ ನೂರರಷ್ಟು ಖಚಿತ. ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ವಿಜಯ ಪತಾಕೆ ಹಾರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
“ನಾನು ಗುರುಮಠಕಲ್ ಕ್ಷೇತ್ರದ ಶಾಸಕನಾಗಿದ್ದ ಸಂದರ್ಭದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡಿದ್ದೇನೆ. ನಾನು ಜನರಿಗಾಗಿ ಹುಟ್ಟಿದ್ದು, ಜನರಿಗಾಗಿಯೇ ಬದುಕಿದ್ದೇನೆ. ಜನರ ಸೇವೆ ಮಾಡುತ್ತಲೇ ಜೀವನ ಮುಗಿಸಬೇಕು ಎಂಬುದು ನನ್ನ ಆಶಯ” ಎಂದು ಚಿಂಚನಸೂರ ಹೇಳಿದರು.
“ಈ ಭಾಗದಿಂದ ನಮ್ಮ ಅಭ್ಯರ್ಥಿ ಗೆಲುವು ಸಾಧಿಸಿದರೆ ನಮ್ಮದೇ ಸರ್ಕಾರ ಇರುವುದರಿಂದ ಶಿಕ್ಷಕರ ಪ್ರತಿಯೊಂದು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡುತ್ತೇನೆ” ಎಂದು ಅವರು ಭರವಸೆ ನೀಡಿದರು.

