Thursday, October 15, 2026
HomeUncategorizedಕೆರೆಗಳಿಗೆ ತಕ್ಷಣ ನೀರು ಹರಿಸಲು ನಾಡಗೌಡ ಒತ್ತಾಯಚಿಮ್ಮಲಗಿ ಏತ ನೀರಾವರಿ ಯೋಜನೆಯಿಂದ ನೀರು ಪೂರೈಸಲು ಆಗ್ರಹ...

ಕೆರೆಗಳಿಗೆ ತಕ್ಷಣ ನೀರು ಹರಿಸಲು ನಾಡಗೌಡ ಒತ್ತಾಯಚಿಮ್ಮಲಗಿ ಏತ ನೀರಾವರಿ ಯೋಜನೆಯಿಂದ ನೀರು ಪೂರೈಸಲು ಆಗ್ರಹ – ಜನ-ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ತೀವ್ರ

ಮುದ್ದೇಬಿಹಾಳ:
ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕ ಹೆಚ್ಚಾಗಿದ್ದು, ಚಿಮ್ಮಲಗಿ ಏತ ನೀರಾವರಿ ಯೋಜನೆಯ ವ್ಯಾಪ್ತಿಗೆ ಒಳಪಡುವ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕಿನ ಕೆರೆಗಳಿಗೆ ತಕ್ಷಣ ನೀರು ಹರಿಸುವಂತೆ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಅವರಿಗೆ ಪತ್ರ ಬರೆದಿರುವ ಶಾಸಕ ನಾಡಗೌಡ ಅವರು, ಮತಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ ಎಂದು ಗಮನ ಸೆಳೆದಿದ್ದಾರೆ.
ಮುದ್ದೇಬಿಹಾಳ ಮತ್ತು ತಾಳಿಕೋಟಿ ತಾಲೂಕಿನ ಬಹುತೇಕ ಕೆರೆಗಳಲ್ಲಿನ ನೀರಿನ ಸಂಗ್ರಹ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಕೆಲವು ಕೆರೆಗಳು ಸಂಪೂರ್ಣ ಬರಿದಾಗುವ ಹಂತ ತಲುಪಿವೆ. ಇದರಿಂದ ಗ್ರಾಮೀಣ ಪ್ರದೇಶಗಳ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದ್ದು, ಜಾನುವಾರುಗಳಿಗೂ ನೀರಿನ ಕೊರತೆ ಎದುರಾಗುವ ಆತಂಕವಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆರೆಗಳಿಗೆ ತಕ್ಷಣ ನೀರು ತುಂಬಿಸುವ ಕಾರ್ಯ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.
ಆಲಮಟ್ಟಿ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ಸೂಚನೆ ಅಗತ್ಯ:
ಚಿಮ್ಮಲಗಿ ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳುವುದರ ಜೊತೆಗೆ ಆಲಮಟ್ಟಿ ಜಲಾಶಯದಿಂದ ಸಂಬಂಧಿಸಿದ ಕಾಲುವೆಗಳಿಗೆ ನೀರು ಹರಿಸುವಂತೆ ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ತುರ್ತು ಸೂಚನೆ ನೀಡಬೇಕು ಎಂದು ಶಾಸಕ ನಾಡಗೌಡ ಅವರು ಮನವಿ ಮಾಡಿದ್ದಾರೆ.
ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವ ಕಾರ್ಯ ವಿಳಂಬವಾದರೆ ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಿಸಬಹುದು. ಈಗಾಗಲೇ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದಾಗಿ ಅಂತರ್ಜಲ ಮಟ್ಟವೂ ಕುಸಿಯುತ್ತಿದ್ದು, ಕೆರೆ-ಕಟ್ಟೆಗಳಲ್ಲಿನ ನೀರಿನ ಪ್ರಮಾಣ ಕಡಿಮೆಯಾಗಿದೆ. ಆದ್ದರಿಂದ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ಕುಡಿಯುವ ನೀರಿಗೆ ಮಾತ್ರ ಕಾಲುವೆ ನೀರು ಬಳಕೆ:
ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಬರದ ತೀವ್ರತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯದಿಂದ ಕಾಲುವೆಗಳಿಗೆ ಹರಿಸುವ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸದೆ, ಜನರು ಮತ್ತು ಜಾನುವಾರುಗಳ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಬೇಕು ಎಂದು ಶಾಸಕ ನಾಡಗೌಡ ಅವರು ರೈತರು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕಾಲುವೆಗಳಿಗೆ ಹರಿಸುವ ನೀರನ್ನು ಜಮೀನುಗಳಿಗೆ ನೀರಾವರಿ ಮಾಡಲು ಬಳಸಿದರೆ, ಈಗಿರುವ ನೀರಿನ ಸಂಗ್ರಹವೂ ಕಡಿಮೆಯಾಗಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇನ್ನಷ್ಟು ಗಂಭೀರವಾಗುವ ಸಾಧ್ಯತೆಯಿದೆ. ಆದ್ದರಿಂದ ಈ ಬಾರಿ ನೀರಿನ ಪ್ರತಿಯೊಂದು ಹನಿಯನ್ನೂ ಅತ್ಯಂತ ಜವಾಬ್ದಾರಿಯಿಂದ ಬಳಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಅಲ್ಪ ಪ್ರಮಾಣದಲ್ಲಿ ನೀರು ಹರಿಸುವ ಸಾಧ್ಯತೆ:
ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ಮತ್ತು ತಾಳಿಕೋಟಿ ತಾಲೂಕಿನ ಕೆರೆಗಳಿಗೆ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಮೂಲಕ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು. ಆದರೆ ಆಲಮಟ್ಟಿ ಜಲಾಶಯದಲ್ಲಿಯೂ ನೀರಿನ ಲಭ್ಯತೆ ಸೀಮಿತವಾಗಿರುವ ಕಾರಣ, ಕಾಲುವೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸುವುದು ಸಾಧ್ಯವಾಗದ ಪರಿಸ್ಥಿತಿ ಇದೆ. ಹೀಗಾಗಿ ಲಭ್ಯವಿರುವ ನೀರನ್ನು ಮಿತವಾಗಿ ಹಾಗೂ ಅಗತ್ಯಕ್ಕೆ ಅನುಗುಣವಾಗಿ ಬಳಸಿಕೊಳ್ಳಬೇಕಾಗಿದೆ ಎಂದು ಶಾಸಕ ನಾಡಗೌಡ ತಿಳಿಸಿದ್ದಾರೆ.
ರೈತರು ಸಹಕರಿಸುವಂತೆ ಮನವಿ:
ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರ ಹಾಗೂ ನೀರಾವರಿ ಇಲಾಖೆಯೊಂದಿಗೆ ಸಾರ್ವಜನಿಕರು ಮತ್ತು ರೈತರು ಸಹಕರಿಸಬೇಕು. ಕಾಲುವೆಗಳಿಗೆ ಹರಿಸುವ ನೀರನ್ನು ಅನಗತ್ಯವಾಗಿ ಬಳಕೆ ಮಾಡದೆ, ಗ್ರಾಮಗಳ ಕುಡಿಯುವ ನೀರಿನ ಅಗತ್ಯತೆ ಹಾಗೂ ಜಾನುವಾರುಗಳ ದಾಹ ನೀಗಿಸುವ ಉದ್ದೇಶಕ್ಕೆ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಬರ ಪರಿಸ್ಥಿತಿ ತೀವ್ರವಾಗಿರುವ ಸಂದರ್ಭದಲ್ಲಿ ನೀರಿನ ಲಭ್ಯತೆ ಹಾಗೂ ಬಳಕೆಯ ಕುರಿತು ಗ್ರಾಮ ಮಟ್ಟದಲ್ಲಿ ಅಧಿಕಾರಿಗಳು ನಿಗಾ ವಹಿಸಬೇಕು. ಯಾವುದೇ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದರೆ ತಕ್ಷಣವೇ ಪರ್ಯಾಯ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ಮತ್ತು ಸಂಬಂಧಿಸಿದ ಇಲಾಖೆಗಳು ಸನ್ನದ್ಧವಾಗಿರಬೇಕು ಎಂದು ನಾಡಗೌಡ ಅವರು ಸೂಚಿಸಿದ್ದಾರೆ.

ಕೊಟ-1
“ಪ್ರಸ್ತುತ ಪರಿಸ್ಥಿತಿಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವುದೇ ಮೊದಲ ಆದ್ಯತೆ. ಕೆರೆಗಳಿಗೆ ನೀರು ತುಂಬಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಮುಂಚಿತವಾಗಿಯೇ ತಡೆಯಬೇಕು. ಲಭ್ಯವಿರುವ ನೀರನ್ನು ರೈತರು ಹಾಗೂ ಸಾರ್ವಜನಿಕರು ಮಿತವಾಗಿ ಬಳಸಿಕೊಂಡು ಸರ್ಕಾರದ ಪ್ರಯತ್ನಕ್ಕೆ ಸಹಕರಿಸಬೇಕು”
-ಸಿ.ಎಸ್.ನಾಡಗೌಡ ಅಪ್ಪಾಜಿ, ಅಧಯಕ್ಷರು ಕೆ.ಎಸ್.ಡಿ.ಎಲ್.‌ ಹಾಗೂ ಶಾಸಕರು, ಮುದ್ದೇಬಿಹಾಳ ಮತಕ್ಷೇತ್ರ.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments